ಹಾಸನ: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ತೊಂದರೆ ನೀಡಿದರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಎಚ್ಚರಿಕೆ ನೀಡಿದ್ದಾರೆ.
ಚನ್ನರಾಯಪಟ್ಟಣದಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿಯವರು ಸಮ್ಮಿಶ್ರ ಸರಕಾರದ ತಂಟೆಗೆ ಬಂದು ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿದರೆ ನಾವೇನು ಕಡ್ಲೆಪುರಿ ತಿನ್ನುತ್ತಾ ಕೂರಲ್ಲ. ಏನು ಮಾಡಬೇಕು ಅದನ್ನು ಮಾಡುತ್ತೇವೆ. ಈ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಸಿಎಂ ಆಗಲು ಬಿಡದಿದ್ದಾಗ ಜನರು ದಂಗೆ ಎದ್ದಿದ್ದರು. ಈಗ ಆ ಇತಿಹಾಸ ಮತ್ತೆ ಮರುಕಳಿಸುತ್ತದೆ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ನಾನೇ ಹೇಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಸಮ್ಮಿಶ್ರ ಸರ್ಕಾರದಲ್ಲಿ ಹುಳಿ ಹಿಂಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಯಾವುದೇ ಭಿನಾಭಿಪ್ರಾಯ ಇಲ್ಲದಿದ್ದರೂ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಾ ಸುಗಮ ಆಡಳಿತಕ್ಕೆ ಧಕ್ಕೆ ಉಂಟುಮಾಡುತ್ತಿದೆ. ಇನ್ನು ಮುಂದೆಯೂ ಬಿಜೆಪಿಯವರು ಸಮ್ಮಿಶ್ರ ಸರ್ಕಾರ ವಿಷಯದಲ್ಲಿ ಹುಡುಗಾಟ ಮಾಡುವುದನ್ನು ಮುಂದುವರೆಸಿದರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನತೆಗೆ ಕರೆ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಕಳೆದ ಎರಡು ದಿನಗಳಿಂದ ಸಚಿವ ಡಿ.ಕೆ.ಶಿವಕುಮಾರ್ ಅವರ ಆಮೇಲೆ ಸಾಕಷ್ಟು ಆರೋಪಗಳನ್ನು ಮಾಡಿದ್ದ ಬಿಜೆಪಿ, ಇಂದು ಬೆಳಿಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹಲವು ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ತಂಟೆಗೆ ಬಂದವರಿಗೆ ತಕ್ಕ ಶಾಸ್ತಿ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.